ಬೆಂಗಳೂರು, ಅಕ್ಟೋಬರ್ 06 (ಕರ್ನಾಟಕ ವಾರ್ತೆ) :
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಎಲ್ಲಾ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ.
ಅಕ್ಟೋಬರ್ 28 ರಂದು ಬೆಳಿಗ್ಗೆ ಶಾಸಕರ ಭವನದ ಆವರಣದಲ್ಲಿರುವ ಶ್ರೀ ವಾಲ್ಮೀಕಿ ತಪೋವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಲಿದೆ.
ನಂತರ ಬೆಳಿಗ್ಗೆ 10.30 ಗಂಟೆಗೆ ರಾಜ್ಯ ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಸಮಾರಂಭವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರ ಉಪಸ್ಥಿತಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಿಂದ ಉದ್ಘಾಟನೆ ನೆರವೇರಲಿದೆ.
ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಮತ್ತು ಇತರೆ ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಹೆಚ್ಚಿನ ಸಾರ್ವಜನಿಕರು ಪಾಲ್ಗೊಳ್ಳುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.