ಬೆಂಗಳೂರು, ಅಕ್ಟೋಬರ್ 26 (ಕರ್ನಾಟಕ ವಾರ್ತೆ):
ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಪೊನ್ನಣ್ಣ ಅವರಿಗೆ ವಿಧಾನ ಸೌಧದಲ್ಲಿಂದು ಮನವಿ ಸಲ್ಲಿಸಿದರು.
ಕಾಫಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಸುತ್ತೋಲೆ ಹೊರಡಿಸಬೇಕು ಹಾಗೂ ಕಾಫಿ ಬೆಳೆಯನ್ನು ಬರಗಾಲ ವ್ಯಾಪ್ತಿಗೆ ಸೇರಿಸಲು ಸೇರಿದಂತೆ ಅನೇಕ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಪೊನ್ನಣ್ಣರವರು ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ನ್ಯಾಯಾಲಯಗಳಲ್ಲಿ ಈ ಬಗ್ಗೆ ಅನೇಕ ತೀರ್ಪುಗಳಾಗಿದ್ದು, ಕಾನೂನಾತ್ಮಕ ಅಂಶಗಳನ್ನು ಒಳಗೊಂಡಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾನೂನಿನ ಅಡಿಯಲ್ಲಿ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲು ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ.ಹೆಚ್.ಟಿ. ಮೋಹನ್‍ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಬಿ.ಕೃಷ್ಣಪ್ಪ, ಕೊಡಗು – ಚಿಕ್ಕಮಂಗಳೂರು ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.