Site icon MOODANA Web Edition

ದಿನಪತ್ರಿಕೆ ವಿತರಿಸುವ ಕಾರ್ಮಿಕರ ವಿಮಾ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹುಬ್ಬಳ್ಳಿ (ಕರ್ನಾಟಕವಾರ್ತೆ) ಡಿ.29: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈಧ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೊಳಿಸಿದೆ.
ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿದ್ದು, ಅರ್ಹ ಎಲ್ಲಾ ದಿನಪತ್ರಿಕೆ ವಿತರಿಸುವ ಕಾರ್ಮಿಕರು www.eshram.gov.in ಪೋರ್ಟಲ್‍ನಲ್ಲಿ ಸ್ವಯಂ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, 16 ರಿಂದ 59 ವಯೋಮಾನದವರಾಗಿರಬೇಕು, ಕೇಂದ್ರ ಸರ್ಕಾರದ ಇ-ಶ್ರಮ ಪೋರ್ಟಲ್‍ನಲ್ಲಿ News Paper Boy ಎಂಬ ವರ್ಗದಡಿ ನೋಂದಣಿಯಾಗಿರಬೇಕು, ಆದಾಯ ತೆರಿಗೆ ಪಾವತಿದಾರರಾಗಿರಬಾರದು, ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.
ಹೆಸರು ನೋಂದಾಯಿಸಿಕೊಳ್ಳುವುದರಿಂದ ದಿನಪತ್ರಿಕೆ ವಿತರಣಾ ಕಾರ್ಮಿಕರು ಅಪಘಾತದಿಂದ ಮರಣ ಹೊಂದಿದಲ್ಲಿ 2 ಲಕ್ಷ ರೂ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂ ಗಳವರೆಗೆ (ಶೇಕಡಾವಾರು ದುರ್ಬಲತೆ ಆಧಾರದ ಮೇಲೆ), ಅಪಘಾತ, ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ 1 ಲಕ್ಷ ರೂ ಗಳವರೆಗೆ ವಿಮಾ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಛೇರಿ/ಆಯಾ ತಾಲ್ಲೂಕಿನ ಹಿರಿಯ ಅಥವಾ ಕಾರ್ಮಿಕ ನಿರೀಕ್ಷಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಹುಬ್ಬಳ್ಳಿ ಉಪವಿಭಾಗ-2 ಕಾರ್ಮಿಕ ಇಲಾಖೆ ಅಧಿಕಾರಿ ಮಾರಿಕಾಂಬ ಎಂ ಹುಲಕೋಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version